ಮಾನ್ವಿ ಅ.16:’ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಉತ್ತಮ ಕಾರ್ಯಕ್ರಮ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು. ಶನಿವಾರ ಮಾನ್ವಿ ತಾಲ್ಲೂಕಿನ ಸಂಗಾಪುರ ಗ್ರಾಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಮಂಜೂರಾದ ಪಿಂಚಣಿ ಸೇರಿದಂತೆ ಇತರ ಆದೇಶ ಪತ್ರಗಳನ್ನು ವಿತರಿಸಲಾಯಿತು. ಗ್ರಾಮೀಣ ಜನರ ಆಹವಾಲುಗಳನ್ನು ಸ್ವೀಕರಿಸಲಾಯಿತು. ತಾಲ್ಲೂಕಿನ ಮಲ್ಲಿಗೆನಡುವು ಗ್ರಾಮದಿಂದ ಜಾನೇಕಲ್ ಗ್ರಾಮದ ವರೆಗೆ ಇರುವ ಸಂಪರ್ಕ ರಸ್ತೆ ಕಡಿತಗೊಂಡಿದ್ದು, ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಜಗದೀಶಯ್ಯ ಸ್ವಾಮಿ ಮತ್ತು ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು. ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಶೀಲ್ದಾರ್ ಅಬ್ದುಲ್ ವಾಹಿದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ, ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಹುಸೇನ್ ಸಾಹೇಬ್ ಸೇರಿದಂತೆ ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.