ಮಾನ್ವಿ: ಕಾತರಕಿ ಮಹಾಲಿಂಗಪ್ಪಗೌಡ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಅಧ್ಯಯನದಲ್ಲಿ ಆಸಕ್ತಿ, ಪರಿಶ್ರಮ ಅಗತ್ಯ: ರಾಮಲಿಂಗಪ್ಪ
ಮಾನ್ವಿ ನ.2: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಆಸಕ್ತಿ ಹಾಗೂ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡುವ ಮೂಲಕ ಉತ್ತಮ ಭವಿಷ್ಯ ಕಂಡುಕೊಳ್ಳಬೇಕು’ ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಲಿಂಗಪ್ಪ ಹೇಳಿದರು.
ಮಂಗಳವಾರ ಪಟ್ಟಣದ ಕಾತರಕಿ ಮಹಾಲಿಂಗಪ್ಪಗೌಡ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ವರ್ಷದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ ಪ್ರಸಕ್ತ ದಿನಗಳಲ್ಲಿ ಬದಲಾದ ಜೀವನಶೈಲಿ ವಿದ್ಯಾರ್ಥಿಗಳ ಕಲಿಕೆ ಮೇಲೆ ಪರಿಣಾಮ ಬೀರಿದೆ. ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆವಿಷ್ಕಾರಗಳನ್ನು ಶೈಕ್ಷಣಿಕ ಪ್ರಗತಿಗೆ ಬಳಸಿಕೊಳ್ಳುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಹೆತ್ತ ತಂದೆ ತಾಯಿಗಳಿಗೆ ಹಾಗೂ ವಿದ್ಯೆ ಕಲಿಸಿದ ಗುರುಗಳಿಗೆ ಕೀರ್ತಿ ತರಬೇಕು’ ಎಂದು ಅವರು ಸಲಹೆ ನೀಡಿದರು.  ಶಿಕ್ಷಣ ಪ್ರೇಮಿಗಳಾಗಿದ್ದ ದಿವಂಗತ ಕಾತರಕಿ ಮಹಾಲಿಂಗಪ್ಪಗೌಡ ಅವರ ಜೊತೆಗಿನ ತಮ್ಮ ಒಡನಾಟದ ಕ್ಷಣಗಳನ್ನು ರಾಮಲಿಂಗಪ್ಪ ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.

ಪ್ರಗತಿ ಪಿಯು ಕಾಲೇಜು ಪ್ರಾಂಶುಪಾಲ ಬಸವರಾಜ ಭೋಗಾವತಿ ಮಾತನಾಡಿ, ‘ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ವಿದ್ಯಾಭ್ಯಾಸದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಗಮನಹರಿಸಬೇಕು. ವಿಷಯಗಳನ್ನು ಪರಿಪೂರ್ಣವಾಗಿ ಅಧ್ಯಯನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಉಪನ್ಯಾಸಕರ ಮಾರ್ಗದರ್ಶನದಲ್ಲಿ ಉತ್ತಮ ಸಾಧನೆ ಮಾಡಿ ಉನ್ನತ ಸ್ಥಾನ ತಲುಪಬೇಕು’ ಎಂದು ಸಲಹೆ ನೀಡಿದರು.ದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಾದ ನಾಗಜ್ಯೋತಿ, ಉದಯ ಮಲ್ಲಿಕಾರ್ಜುನ  ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅತಿಥಿಗಳಾದ ರಾಮಲಿಂಗಪ್ಪ ಹಾಗೂ ಬಸವರಾಜ ಭೋಗಾವತಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.
ಕಾತರಕಿ ಮಹಾಲಿಂಗಪ್ಪಗೌಡ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕಾತರಕಿ ಶರಣಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಮಹೇಶಕುಮಾರ ಕಾತರಕಿ, ಉಪ ಪ್ರಾಂಶುಪಾಲ ಸತ್ಯನಾರಾಯಣ, ಉಪನ್ಯಾಸಕರಾದ ಕೆ.ಶೋಭಾ, ಹುಸೇನ್ ಬಾಷಾ, ವೈಷ್ಣವಿ, ಪವಿತ್ರಾ ಇದ್ದರು. ವಿದ್ಯಾರ್ಥಿನಿ ದುರ್ಗಾ ಭವಾನಿ ಸ್ವಾಗತಿಸಿದರು. ವಿದ್ಯಾರ್ಥಿನಿ
ಶ್ರೀಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶ್ರೀಲೇಖಾ ವಂದಿಸಿದರು.