ನ.30 ಕ್ಕೆ ಪಿಯು ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ-ಪಿ‌.ತಿಪ್ಪಣ್ಣ ಬಾಗಲವಾಡ ವಕೀಲ

ಮಾನ್ವಿ ನ.23: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸಹಯೋಗಲ್ಲಿ ನ.30 ಹಾಗೂ ಡಿ.1ರಂದು ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ’ ಎಂದು ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ತಿಪ್ಪಣ್ಣ ಬಾಗಲವಾಡ ವಕೀಲ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಈ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಮಾನ್ವಿ ಪಟ್ಟಣದ ಲೊಯೋಲ ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗುವುದು. ತಾಲ್ಲೂಕಿನ 18 ಪಿಯು ಕಾಲೇಜುಗಳ ಸುಮಾರು 1ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ’ ಎಂದರು. ‘ ಕ್ರೀಡಾಕೂಟವನ್ನು ಸ್ಥಳೀಯ ಶಾಸಕ ರಾಜಾ ವೆಂಕಟಪ್ಪ ನಾಯಕ ಉದ್ಘಾಟಿಸುವರು. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ ಕ್ರೀಡಾ ಧ್ವಜಾರೋಹಣ ನೆರವೇರಿಸುವರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆನಂದರಾಜ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವರು. ತಾಲ್ಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಬೇಕು’ ಎಂದು ಅವರು ಮನವಿ ಮಾಡಿದರು.
‘ಕ್ರೀಡೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ನೋಂದಣಿ ಸೇರಿದಂತೆ ಇತರ ವಿಷಯಗಳ ಕುರಿತು ಶೀಘ್ರ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರ ಸಭೆ ಕರೆದು ಚರ್ಚಿಸಲಾಗುವುದು’ ಎಂದು ಅವರು ತಿಳಿಸಿದರು. ಸಿದ್ದಾರ್ಥ ಕಾಲೇಜಿನ ಪ್ರಾಂಶುಪಾಲ ಹನುಮಂತಪ್ಪ ಹರವಿ, ಉಪನ್ಯಾಸಕರಾದ ಮಹಾಂತಗೌಡ ದೇವಿಪುರ, ದುರುಗಪ್ಪ ತಡಕಲ್ ಹಾಗೂ ಡಾ.ಹುಲಿಯಪ್ಪ ಇದ್ದರು.